Home Latest ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ : ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಗೀತಾಂಜಲಿ...

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ : ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಗೀತಾಂಜಲಿ ಸುವರ್ಣ ಆಯ್ಕೆ…!!

ಉಡುಪಿ: ರಾಜ್ಯಾದ್ಯಂತ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ಉಡುಪಿ ಜಿಲ್ಲಾ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಗೀತಾಂಜಲಿ ಸುವರ್ಣ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.

ಗೀತಾಂಜಲಿ ಸುವರ್ಣ ಅವರು ಈ ಹಿಂದೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಜನಪರ ಸೇವೆ ಸಲ್ಲಿಸಿದ ಅಪಾರ ಅನುಭವ ಹೊಂದಿದ್ದಾರೆ.

ರಾಜಕೀಯದ ಜೊತೆಗೆ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಅನೇಕ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದ್ದಾರೆ.

ಶಿಕ್ಷಣ ಕ್ಷೇತ್ರದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಇವರ ನೇತೃತ್ವವು ಜಿಲ್ಲೆಯಲ್ಲಿ ಅಭಿಯಾನವನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಸಂಘಟನೆಯ ಪ್ರಮುಖರು ಆಶಯ ವ್ಯಕ್ತಪಡಿಸಿದ್ದಾರೆ.

ತಮ್ಮ ಆಯ್ಕೆಯ ಕುರಿತು ಮಾತನಾಡಿದ ಗೀತಾಂಜಲಿ ಸುವರ್ಣ ಅವರು, “ಕನ್ನಡ ಶಾಲೆಗಳ ಉಳಿವು ನಮ್ಮೆಲ್ಲರ ಜವಾಬ್ದಾರಿ. ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಕನ್ನಡ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಮಹಿಳಾ ಘಟಕದ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಹೆತ್ತವರಲ್ಲಿ ಸರ್ಕಾರಿ ಕನ್ನಡ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲು ನಾವು ಶ್ರಮಿಸುತ್ತೇವೆ,” ಎಂದು ತಿಳಿಸಿದರು.